ಬೆಂಗಳೂರು,ನವೆಂಬರ್,11,2025 (www.justkannada.in): ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ ಬೆದರಿಕೆ ಇತ್ತು. ಹಿಂದೆ ರೌಡಿ ಕೊತ್ವಾಲ್ ರಾಮಚಂದ್ರನ ಜೊತೆ ಇದ್ದ ಪುಟ್ಟಸ್ವಾಮಿಯಿಂದ ಜೀವ ಬೆದರಿಕೆ ಇತ್ತು. ಆದರೆ ನಾನು ಹೆದರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.
ಗಾಂಧಿನಗರದಲ್ಲಿ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುವ ವೇಳೆ ಸಿಎಂ ಸಿದ್ದರಾಮಯ್ಯ ಈ ವಿಚಾರ ಪ್ರಸ್ತಾಪಿಸಿದರು.
ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ ಬೆದರಿಕೆ ಹಾಕಲಾಗಿತ್ತು. ಆದರೂ ನಾನು ಹೆದರದೆ ಗ್ರಾಮೀಣ ಭಾಗದ ಸಂಘದ ನಿರ್ದೇಶಕರ ಬೆಂಬಲದಲ್ಲಿ ದಾವಣಗೆರೆಯ ಮಲ್ಲಪ್ಪ ಅವರನ್ನು ರೌಡಿ ಪುಟ್ಟಸ್ವಾಮಿ ವಿರುದ್ಧ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ನಿಲ್ಲಿಸಿದೆ. ಪುಟ್ಟಸ್ವಾಮಿ ನ್ಯಾಯಾಲಯಕ್ಕೆ ಹೋದರೂ ತೀರ್ಪು ನಮ್ಮ ಪರವಾಗಿ ಬಂತು. ಹೀಗೆ ಸಂಘವನ್ನು ನಾನು ಉಳಿಸಿದೆ ಎಂದರು.
ಬಳಿಕ ನನ್ನ ಹಳೇ ಕಾರಲ್ಲಿ ಇಡೀ ರಾಜ್ಯ ಸುತ್ತಿ ಸಮಾಜವನ್ನು ಸಂಘಟಿಸಿದೆ. ತಾರಾಕಾನಂದರನ್ನು ಪೀಠಾಧ್ಯಕ್ಷರನ್ನಾಗಿ ಮಾಡಲು ತೀರ್ಮಾನಿಸಿದ್ದು ನಾನೇ. ಮುಖ್ಯಮಂತ್ರಿ ಆಗಿದ್ದ ಬಂಗಾರಪ್ಪ ಅವರನ್ನು ಮತ್ತು ಕೇಂದ್ರ ಸಚಿವರಾಗಿದ್ದ ಶರದ್ ಪವಾರ್ ಅವರನ್ನು ಕರೆಸಿ ಪೀಠಕ್ಕೆ ಚಾಲನೆ ನೀಡಲಾಯಿತು. ಹೀಗೆ ಕುರುಬರ ಸಂಘ ಮತ್ತು ಕುರುಬ ಸಮಾಜದ ಪೀಠವನ್ನು ಉಳಿಸಿದ್ದು ನಾನು. ರಾಜ್ಯ ಸುತ್ತಿ ಸಮಾಜದ ಸಂಘಟಿಸಿದ್ದು ನಾನು, ಮುಕುಡಪ್ಪ, ಮಾಸ್ತಿ ಮತ್ತು ಇತರರು. ಆಮೇಲೆ ವಿಶ್ವನಾಥ್ ಅವರನ್ನು ಪೀಠದ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ್ದು ನಾನು. ಈಗ ವಿಶ್ವನಾಥ್ ಬಾಯಿಗೆ ಬಂದಂತೆ ಮಾತಾಡುತ್ತಾರೆ. ಆದ್ದರಿಂದ ಇಡೀ ಸಮಾಜ ಈ ಸತ್ಯವನ್ನು ಅರ್ಥ ಮಾಡಿಕೊಳ್ಳಬೇಕು. ನಾನು ಸಮಾಜಕ್ಕೆ ಏನು ಮಾಡಿದ್ದೇನೆ ಎನ್ನುವ ಚರಿತ್ರೆಯನ್ನು ಮನದಟ್ಟು ಮಾಡಿಕೊಳ್ಳಬೇಕು. ಗುರುಪೀಠ ನಾನು ಮಾಡಿದ್ದು ಎಂದು ನಿರಂಜನಾನಂದಪುರಿ ಸ್ವಾಮೀಜಿಗೆ ಹೆದರಿಸುವವರು ಇತಿಹಾಸ ತಿರುಚುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
Key words: Rowdy, life threatened, CM, Siddaramaiah
The post ರೌಡಿ sahacharaninda ಜೀವ ಬೆದರಿಕೆ: cm ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





