ಮೈಸೂರು,ಮಾರ್ಚ್,2,2026 (www.justkannada.in): ಬೇಸಿಗೆ ಪ್ರಾರಂಭವಾಗುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು.
ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕುಡಿಯುವ ನೀರಿನ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ಕುಡಿಯುವ ನೀರಿನ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಟಾಸ್ಕ್ ಫೋಸ್೯ ಸಮಿತಿಗಳಿದ್ದು, ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗಬಹುದಾದ ಗ್ರಾಮಗಳನ್ನು ಪಟ್ಟಿ ಮಾಡಿಕೊಳ್ಳಿ ಎಂದರು.
ಕಳೆದ ಬಾರಿ ಕೊರೆಯಲಾಗಿರುವ ಹಾಗೂ ಲಭ್ಯವಿರುವ ಬೋರ್ ವೆಲ್ ಗಳ ಸ್ಥಿತಿಗತಿಗಳನ್ನು ಪರಿಶೀಲಿಸಿಕೊಳ್ಳಿ. ಖಾಸಗಿ ಬೋರ್ ವೆಲ್ ಗಳನ್ನು ಪಟ್ಟಿ ಮಾಡಿಕೊಳ್ಳಿ. ಕುಡಿಯುವ ನೀರಿನ ತೊಂದರೆಯಾದಲ್ಲಿ ತಕ್ಷಣ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ತನ್ನಿ ಎಂದರು.
ಬೇಸಿಗೆ ಕಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿದ್ದು, ವೈದ್ಯಾಧಿಕಾರಿಗಳು ಸಾಂಕ್ರಮಿಕ ರೋಗ ಹರಡದಂತೆ ಕೈಗೊಳ್ಳಬೇಕಿರುವ ಮುನ್ನಚ್ಚರಿಕಾ ಕ್ರಮಗಳ ಬಗ್ಗೆ ಯೋಜನೆ ರೂಪಿಸಿ ಎಂದರು.
ನರಸಿಂಹರಾಜ ವಿಧಾನ ಸಭಾ ಕ್ಷೇತ್ರದ ಶಾಸಕ
ತನ್ವೀರ್ ಸೇಠ್ ಅವರು ಮಾತನಾಡಿ ಜೆ.ಜೆ.ಎಂ. ಹಾಗೂ ಎಂ.ವಿ.ಎಸ್ ಯೋಜನೆಯಡಿ ಒದಗಿಸಲಾಗುತ್ತಿರುವ ಕುಡಿಯುವ ನೀರಿನ ಯೋಜನೆಗಳ ಕಾರ್ಯನಿರ್ವಹಣೆಯ ಬಗ್ಗೆ ಅಧಿಕಾರಿಗಳು ಪರಿಶೀಲಿಸಬೇಕು. ಮುಂದೆ ಬರಗಾಲ ಉಂಟಾದರೆ ವಹಿಸಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳು ಸಭೆ ನಡೆಸಿ ಬೇಕಿರುವ ಅನುದಾನದ ಬಗ್ಗೆ ವರದಿ ಸಿದ್ಧಪಡಿಸಿ ಎಂದರು.
ಕಾ.ನೀ.ನಿ.ನಿಯಮಿತದ ಮುಖ್ಯ ಅಭಿಯಂತರ ಮಹೇಶ್ ಅವರು ಮಾತನಾಡಿ ಅಣೆಕಟ್ಟಿನಲ್ಲಿ ನೀರಿನ ಲಭ್ಯತೆಯ ಅನುಸಾರ ಜೂನ್ ಅಂತ್ಯದವರೆಗೂ ಕುಡಿಯುವ ನೀರಿಗೆ ತೊಂದರೆಯಿಲ್ಲ. ವಾಡಿಕೆಯ ಪ್ರಕಾರ ಮಳೆ ನಿರೀಕ್ಷಿಸಲಾಗಿದೆ, ಆದರಿಂದ ಕುಡಿಯುವ ನೀರಿಗೆ ತೊಂದರೆಯಾಗುವುದಿಲ್ಲ ಎಂದರು.
ರಮ್ಮನಹಳ್ಳಿ, ಬೋಗಾದಿ, ಕಡಕೊಳ ಹಾಗೂ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಬೇಕಿರುವ 13 MLD ನೀರಿಗೆ ಕಬಿನಿ ಯೋಜನೆಯಡಿ ಪ್ರಸ್ತಾವನೆ ನೀಡಲಾಗಿದೆ ಎಂದು ನಗರ ಸ್ಥಳೀಯ ಸಂಸ್ಥೆಗಳ ಯೋಜನಾ ನಿರ್ದೇಶಕಿ ಪ್ರಿಯಾದರ್ಶಿನಿ ಅವರು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಮೈಸೂರು ಮಹಾನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Key words: Summer, drinking water, Minister, Dr. H.C. Mahadevappa
The post ಬೇಸಿಗೆ: ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ-ಸಚಿವ ಡಾ: ಹೆಚ್.ಸಿ.ಮಹದೇವಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





