ಮೈಸೂರು ಅಕ್ಟೋಬರ್, 13, 2025 (www.justkannada.in): ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆಗೊಂಡು 50 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಕ್ಟೋಬರ್ 27 ರಂದು ಸುವರ್ಣ ಮಹೋತ್ಸವ ಆಚರಿಸಲಾಗುವುದು ಎಂದು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಅವರು ಹೇಳಿದರು.
ಇಂದು ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಸುವರ್ಣ ಮಹೋತ್ಸವ ಆಚರಿಸುವ ಸಂಬಂಧ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಕ್ಟೋಬರ್ 27 ರಂದು ಕಾರ್ಯಕ್ರಮ ಆಯೋಜಿಸಲು ಉತ್ತಮ ಸ್ಥಳವನ್ನು ಗುರುತಿಸಿ. ಕಾರ್ಯಕ್ರಮವನ್ನು ಮೈಸೂರು ಹಾಗೂ ಕೊಡಗು ಜಿಲ್ಲೆಗೆ ಸೇರಿದಂತೆ ಸಂಘಟಿಸಲಾಗುವುದು. ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಸ್ಥಳೀಯ ಪರಿಸರವಾದಿಗಳು, ಕೈಗಾರಿಕೋದ್ಯಮಿಗಳು ಭಾಗವಹಿಸಲು ಆಹ್ವಾನ ನೀಡಿ ಎಂದರು.
ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ಆಚರಿಸುವ ಉದ್ದೇಶದಿಂದ ಸ್ವಾಗತ ಸಮಿತಿ, ವೇದಿಕೆ ಸಮಿತಿ, ಆಹಾರ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿರುತ್ತದೆ. ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಯಾವುದೇ ಲೋಪವಾಗದಂತೆ ನಿರ್ವಹಿಸಬೇಕು ಎಂದರು.
ಇ-ತ್ಯಾಜ್ಯ ( Electric Waste), ಪ್ಲಾಸ್ಟಿಕ್ ತ್ಯಾಜ್ಯ, ಘನ ತ್ಯಾಜ್ಯ, ಜಲ, ವಾಯು ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಮಾಡಲಾಗುವುದು, ಪರಿಸರ ಸಂರಕ್ಷಣೆ ಕುರಿತಾಗಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳು, ವಸತಿ ಶಾಲೆಗಳ ವಿದ್ಯಾರ್ಥಿಗಳು ಭಾಗಿಯಾಗಬೇಕು, ಪರಿಸರ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳು ಹಾಗೂ ಯುವಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್ ಎಸ್, ನಗರ ವಿಭಾಗದ ಪರಿಸರ ಅಧಿಕಾರಿ ವಿ.ಎಸ್. ಕುಮಾರ್, ಗ್ರಾಮೀಣ ವಿಭಾಗದ ಪರಿಸರ ಅಧಿಕಾರಿ ವಿ. ಸುನೀಲ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Key words: Pollution Control Board, Golden Jubilee, October 27 , Mysore DC, Laxmikant Reddy
The post ಮಾಲಿನ್ಯ ನಿಯಂತ್ರಣ ಮಂಡಳಿಗೆ 50 ವರ್ಷ: ಅ.27ರಂದು ಸುವರ್ಣ ಮಹೋತ್ಸವ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





