ಬೆಂಗಳೂರು,ನವೆಂಬರ್,7,2025 (www.justkannada.in): ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ಸಮಸ್ಯೆ ಬಗೆಹರಿಸಲು ನಾವು ಸಿದ್ದರಿದ್ದೇವೆ. ಕೇಂದ್ರ ಸರ್ಕಾರ ಪರಿಹರಿಸಬೇಕಾದ ಸಮಸ್ಯೆಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ? ಕೇಂದ್ರದಿಂದ ಆಗಿರುವ ಸಮಸ್ಯೆಗೆ ರಾಜ್ಯ ಸರ್ಕಾರದಿಂದ ಪರಿಹಾರ ಕೇಳಿದರೆ ಹೇಗೆ ರೈತ ಮುಖಂಡರಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
ಇಂದು ರೈತ ಮುಖಂಡರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸುತ್ತಿದ್ದು ಸಭೆಯಲ್ಲಿ ಮಾತನಾಡಿದ ಅವರು, ಸಕ್ಕರೆಗೆ ಎಮ್ಎಸ್ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರ. ಇದೇ ರೀತಿ ಕಬ್ಬಿಗೆ ಎಫ್ ಆರ್ ಪಿ ನಿಗದಿಪಡಿಸುವವರು ಕೇಂದ್ರ ಸರ್ಕಾರ. ಎಥೆನಾಲ್ ಹಂಚಿಕೆ ನಿಗದಿಪಡಿಸುವವರು ಕೇಂದ್ರ ಸರ್ಕಾರ. ಸಕ್ಕರೆ ರಫ್ತು ಮಿತಿ ನಿಗದಿಪಡಿಸುವವರು ಸಹ ಕೇಂದ್ರ ಸರ್ಕಾರ ಅಂತ ನೀವೇ ಹೇಳ್ತೀರಿ. ಅವರಿಂದ ಆಗಿರುವ ಸಮಸ್ಯೆಗೆ ರಾಜ್ಯ ಸರ್ಕಾರದಿಂದ ಪರಿಹಾರ ಕೇಳಿದರೆ ಹೇಗೆ ಎಂದು ರೈತ ಮುಖಂಡರಿಗೆ ಪ್ರಶ್ನಿಸಿದರು.
ತೂಕದಲ್ಲಿ ಮೋಸ, ರಿಕವರಿ ಕಡಿಮೆ ತೋರಿಸುವುದು ಸೇರಿದಂತೆ ಸಕ್ಕರೆ ಕಾರ್ಖಾನೆಗಳ ಕುರಿತು ಕಬ್ಬು ಬೆಳೆಗಾರರಿಗೆ ಇರುವ ಎಲ್ಲಾ ಅಹವಾಲುಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.
ಕೇಂದ್ರ ಸರ್ಕಾರ ಕಬ್ಬಿಗೆ ನಿಗದಿಪಡಿಸಿರುವ ಎಫ್ ಆರ್ ಪಿ ವೈಜ್ಞಾನಿಕವಾಗಿಲ್ಲ. ಸಕ್ಕರೆ ಕಾರ್ಖಾನೆಗಳು ಇಳುವರಿ ರಿಕವರಿ ಕಡಿಮೆ ತೋರಿಸುತ್ತಿವೆ. ಕಾರ್ಖಾನೆಗಳು ತೂಕದಲ್ಲಿ ಮೋಸ ಮಾಡುತ್ತಿವೆ. ಇದನ್ನು ತಪ್ಪಿಸಲು ಪ್ರತಿ ಕಾರ್ಖಾನೆ ಎದುರು ಸರ್ಕಾರದ ವತಿಯಿಂದ ಪ್ರಯೋಗಾಲಯ ತೆರೆಯಬೇಕು. ಕೆಲವು ಕಾರ್ಖಾನೆಗಳು ಹಳೆಯ ಬಾಕಿಯನ್ನು ಉಳಿಸಿಕೊಂಡಿದ್ದು, ಇದರ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಮನವಿ ಮಾಡಿದರು.
FRP ದರ ನಿಗಧಿ ಮಾಡುವಾಗ ಕೇಂದ್ರ ಅವೈಜ್ಞಾನಿಕ ಕ್ರಮ ಅನುಸರಿಸಿದೆ. ಉತ್ಪಾದನಾ ವೆಚ್ಚ ಹಿಂದಿನ ವರ್ಷಗಳಿಗಿಂತ 4 ಸಾವಿರ ಕಡಿಮೆ ತೋರಿಸಿದ್ದಾರೆ. ಇದ್ಯಾವ ಲೆಕ್ಕಾಚಾರ ಎಂದು ರೈತ ಮುಖಂಡರು ಸಭೆಯಲ್ಲಿ ಪ್ರಶ್ನಿಸಿದರು.
ಬಾಗಲಕೋಟೆಯಲ್ಲಿ ಕಾರ್ಖಾನೆಯೊಂದು ಹಿಂದಿನ ವರ್ಷದ ಬಾಕಿ ಉಳಿಸಿಕೊಂಡಿದೆ ಎಂದು ರೈತ ಮುಖಂಡರು ದೂರಿದರು. ಈ ವೇಳೆ ಮಾತನಾಡಿದ ಸಚಿವ ಶಿವಾನಂದ ಪಾಟೀಲ್ ಬಾಕಿ ತೀರಿಸಲು ಸೂಚನೆ ನೀಡಲಾಗಿದೆ ಎಂದರು.
Key words: Sugarcane, price fixing, Meeting, CM Siddaramaiah
The post ಕಬ್ಬಿನ ದರ ನಿಗದಿ: ಕೇಂದ್ರದಿಂದಾಗಿರುವ ಸಮಸ್ಯೆಗೆ ರಾಜ್ಯ ಸರ್ಕಾರದ ಬಳಿ ಪರಿಹಾರ ಕೇಳಿದ್ರೆ ಹೇಗೆ? ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





